“ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರಷರಾದ ಕೋಟಿ-ಚೆನ್ನಯ ಹೆಸರಿಡಬೇಕು” ಎಂದು ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.ಈ ಕುರಿತು ವಿಧಾನಸಭೆ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, “ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯನ್ನು ಈಗ ಅದಾನಿ ಸಂಸ್ಥೆಗೆ ವಹಿಸಲಾಗಿದ್ದು, ಅದಾನಿ ಸಂಸ್ಥೆ ವಿಮಾನ ನಿಲ್ದಾಣಕ್ಕೆ ಅದಾನಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರಿಡಲಾಗಿದೆ. ಹೀಗಾಗಿ ಈ ವಿಚಾರಕ್ಕೆ ಕರಾವಳಿ ಭಾಗದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಕೋಟಿ-ಚೆನ್ನಯ ಅವರ ಹೆಸರನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಈ ಪ್ರಸ್ತಾಪಕ್ಕೆ ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅದಾನಿ ಸಂಸ್ಥೆಗೆ ಕೇಂದ್ರ ಸರಕಾರ ಗುತ್ತಿಗೆ ನೀಡಿದ್ದು, ಈ ಕುರಿತು ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ವಿಮಾನ ನಿಲ್ದಾಣದ ಹೆಸರು ಬದಲಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.